*ಕೃಷಿ ಸಂಶೋಧನೆ, ನವೀನ ತಂತ್ರಜ್ಞಾನಕ್ಕೆ ಒತ್ತು: ಧಾರವಾಡ ಕೃಷಿ ವಿವಿಯ 40ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿದ ಸಚಿವ ನರೇಂದ್ರಸ್ವಾಮಿ*
*ಸಕ್ಕರೆ ನಾಡು ಧಾರವಾಡ*:- ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ 40ನೇ ಸಂಸ್ಥಾಪನಾ ದಿನಾಚರಣೆಗೆ ಸಚಿವ ನರೇಂದ್ರಸ್ವಾಮಿ ಅವರು ಚಾಲನೆ ನೀಡಿದರು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆಯನ್ನು ಸಚಿವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಂಗವಾಗಿ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ವಸ್ತುಪ್ರದರ್ಶನಕ್ಕೆ ಸಚಿವರು ಭೇಟಿ ನೀಡಿ, ಕೃಷಿ ಕ್ಷೇತ್ರಕ್ಕೆ ಪೂರಕವಾದ ವಿವಿಧ ಉಪಕರಣಗಳು, ನವೀನ ತಂತ್ರಜ್ಞಾನಗಳು ಹಾಗೂ ಉಪಯುಕ್ತ ಉತ್ಪನ್ನಗಳನ್ನು ವೀಕ್ಷಿಸಿದರು. ಅಲ್ಲದೆ, ಅವುಗಳ ಕಾರ್ಯವೈಖರಿ ಮತ್ತು ಕೃಷಿ ಚಟುವಟಿಕೆಗಳಲ್ಲಿ ಅವುಗಳ ಬಳಕೆಯ ಕುರಿತು ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡರು.
ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳ ಅಳವಡಿಕೆ, ಸಂಶೋಧನೆ ಹಾಗೂ ನವೀನ ಪ್ರಯೋಗಗಳ ಮಹತ್ವವನ್ನು ಸಾರುವ ಉದ್ದೇಶದಿಂದ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಐಸಿಎಆರ್ ಉಪ ಮಹಾನಿರ್ದೇಶಕ ಡಾ. ಯಶ್ ಪಾಲ್ ಸಿಂಗ್ ಮಲಿಕ್, ಶಾಸಕ ಎನ್.ಎಚ್. ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕನ್ನವರ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ಬಿ. ಪ್ರಕಾಶ್ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಗಣ್ಯರು ಹಾಗೂ ಇತರರು ಉಪಸ್ಥಿತರಿದ್ದರು.

